ಸಿದ್ದಲಿಂಗಯ್ಯನವರು (೩ ಫೆಬ್ರವರಿ ೧೯೫೪ – ೧೧ ಜೂನ್ ೨೦೨೧) ಕನ್ನಡದ ಲೇಖಕರಲ್ಲೊಬ್ಬರು. ‘ಬಂಡಾಯ ಸಾಹಿತಿ’, ‘ದಲಿತ ಕವಿ’ ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ಕರ್ನಾಟಕ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿರುವವರು.
ಸಿದ್ಧಲಿಂಗಯ್ಯನವರು ರಾಮನಗರ ಜಿಲ್ಲೆ(ಆಗಿನ ಬೆಂಗಳೂರು ಗ್ರಾಮಾಂತರ ಜಿಲ್ಲೆ)ಯ ಮಾಗಡಿ ತಾಲ್ಲೂಕಿನ ಮಂಚನಬೆಲೆ ಗ್ರಾಮದಲ್ಲಿ ೧೯೫೪ರಲ್ಲಿ ಜನಿಸಿದರು. ತಂದೆ ದೇವಯ್ಯ, ತಾಯಿ ಶ್ರೀಮತಿ ವೆಂಕಮ್ಮ.
ಮಲ್ಲೇಶ್ವರದ ಸರ್ಕಾರಿ ಪ್ರೌಢಶಾಲೆ ಇವರ ವಿದ್ಯಾಕೇಂದ್ರವಾಗಿತ್ತು. ಆ ವೇಳೆಗಾಗಲೇ ಕವಿತೆ ಬರೆವ ಅಭ್ಯಾಸ ಇವರಿಗಿತ್ತು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.
ಸಿದ್ದಲಿಂಗಯ್ಯನವರಿಗೆ ಹಾಸ್ಯ ಪ್ರಜ್ಞೆ ಇತ್ತು.
‘ಗ್ರಾಮ ದೇವತೆಗಳು’ ಅವರ ಪಿಎಚ್.ಡಿ. ಮಹಾಪ್ರಬಂಧ. ʼಊರು ಕೇರಿʼ ಅವರ ಆತ್ಮಕತೆ. “ಇಕ್ರಲಾ ವದೀರ್ಲಾ”, “ದಲಿತರು ಬರುವರು ದಾರಿ ಬಿಡಿ” ಮುಂತಾದ ಹೋರಾಟದ ಗೀತೆಗಳಲ್ಲದೆ “ಆ ಬೆಟ್ಟದಲ್ಲಿ ಬೆಳದಿಂಗಳಲ್ಲಿ” ಅಂತಹ ಭಾವಗೀತೆಗಳನ್ನೂ, “ಯಾರಿಗೆ ಬಂತು ಎಲ್ಲಿಗೆ ಬಂತು ನಲವತ್ತೇಳರ ಸ್ವಾತಂತ್ರ್ಯ” ಅಂತಹ ಚಿತ್ರಗೀತೆಗಳನ್ನೂ ಬರೆದಿದ್ದಾರೆ
ಸಿದ್ಧಲಿಂಗಯ್ಯನವರು ಎರಡು ಬಾರಿ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿದ್ದುದಲ್ಲದೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದರು. ಶ್ರವಣಬೆಳಗೊಳದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಸಿದ್ದಲಿಂಗಯ್ಯ ಅವರು ೧೧ ಜೂನ್ ೨೦೨೧ರ ಶುಕ್ರವಾರದಂದು ಬೆಂಗಳೂರಿನಲ್ಲಿ ನಿಧನರಾದರು. ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದ ಅವರು ಕೊರೋನೋತ್ತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಅವರಿಗೆ ೬೭ ವರ್ಷ ವಯಸ್ಸಾಗಿತ್ತು.