ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ – ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು.
ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ‘ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.
ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ ೨೯, ೧೯೦೪ ರಲ್ಲಿ ಜನಿಸಿದರು. ತಂದೆ ವೆಂಕಟಪ್ಪ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು.
ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ. ಎ. ಪದವಿಯನ್ನೂ ಪಡೆದರು. ಟಿ. ಎಸ್. ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು.
ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ಪ್ರಾಂಶುಪಾಲರೂ ಆಗಿದ್ದರು. ನಂತರ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.
ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಅವರು ಕುವೆಂಪು ಅವರ ಅಳಿಯ.
ಕುವೆಂಪು ಅವರು ನವೆಂಬರ್ ೧೧, ೧೯೯೪ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.